ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ.
ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಆರು ಪಕ್ಷಗಳು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆ.05 ರ ಆರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕ್ರಮ ದುರದೃಷ್ಟಕರ. ಆರ್ಟಿಕಲ್ 370 ಮರು ಸ್ಥಾಪನೆ, ಹಾಗೂ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರಳಿ ತರುವುದಕ್ಕೆ ಹೋರಾಡುವುದಾಗಿ ತಿಳಿಸಿವೆ.
2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿ, ರಾಜ್ಯ ಸ್ಥಾನಮಾನವನ್ನು ರದ್ದು ಗೊಳಿಸಿತ್ತು. ಜಮ್ಮು ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು.